Wednesday, July 30, 2025
HomeStateMUDA Scam :  ಸಿದ್ದರಾಮಯ್ಯಗೆ ಸಂಕಷ್ಟ? ತನಿಖೆ ಮುಂದುವರಿಸಲು ಲೋಕಾಯುಕ್ತಕ್ಕೆ ಕೋರ್ಟ್ ಆದೇಶ…!

MUDA Scam :  ಸಿದ್ದರಾಮಯ್ಯಗೆ ಸಂಕಷ್ಟ? ತನಿಖೆ ಮುಂದುವರಿಸಲು ಲೋಕಾಯುಕ್ತಕ್ಕೆ ಕೋರ್ಟ್ ಆದೇಶ…!

MUDA Scam – ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ವಿರುದ್ಧ ಕೇಳಿಬಂದಿರುವ ಬಹುಕೋಟಿ ಮುಡಾ ಹಗರಣ (ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ನಡೆದಿದೆ. ಈ ಪ್ರಕರಣದಲ್ಲಿ ಲೋಕಾಯುಕ್ತ (Lokayukta) ಪೊಲೀಸರು ಸಲ್ಲಿಸಿದ್ದ ‘ಬಿ’ ರಿಪೋರ್ಟ್ ಅನ್ನು ಪ್ರಶ್ನಿಸಿ ದೂರುದಾರ ಸ್ನೇಹಮಯಿ ಕೃಷ್ಣ ಅವರು ಸಲ್ಲಿಸಿದ್ದ ತಕರಾರು ಅರ್ಜಿಯ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಲೋಕಾಯುಕ್ತ ಪೊಲೀಸರಿಗೆ ತನಿಖೆಯನ್ನು ಮುಂದುವರೆಸುವಂತೆ ಸೂಚನೆ ನೀಡಿದೆ.

MUDA Scam : ತನಿಖೆ ಮುಂದುವರೆಸಲು ಕೋರ್ಟ್ ನಿರ್ದೇಶನ

ನ್ಯಾ. ಸಂತೋಷ್ ಗಜಾನನ ಭಟ್ ಅವರಿದ್ದ ಪೀಠವು ಲೋಕಾಯುಕ್ತ ಪೊಲೀಸರು ಸಲ್ಲಿಸಿರುವ ‘ಬಿ’ ರಿಪೋರ್ಟ್ ಕುರಿತು ಸದ್ಯಕ್ಕೆ ಯಾವುದೇ ಆದೇಶವನ್ನು ನೀಡಿಲ್ಲ. ಬದಲಾಗಿ, ತನಿಖೆಯು ಇನ್ನೂ ಪೂರ್ಣಗೊಳ್ಳದ ಕಾರಣ, ತನಿಖೆಯನ್ನು ಮುಂದುವರೆಸಲು ಸ್ಪಷ್ಟ ನಿರ್ದೇಶನ ನೀಡಿದೆ ಜೊತೆಗೆ, ಜಾರಿ ನಿರ್ದೇಶನಾಲಯ (Enforcement Directorate – ED) ಕೂಡ ಈ ಪ್ರಕರಣದಲ್ಲಿ ತಕರಾರು ಅರ್ಜಿ ಸಲ್ಲಿಸುವ ಅವಕಾಶವನ್ನು ನ್ಯಾಯಾಲಯವು ನೀಡಿದೆ. ಲೋಕಾಯುಕ್ತ ಪೊಲೀಸರ ಅಂತಿಮ ವರದಿ ಬಂದ ನಂತರವೇ ‘ಬಿ’ ರಿಪೋರ್ಟ್ ಕುರಿತು ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ನ್ಯಾಯಾಲಯವು ಸ್ಪಷ್ಟಪಡಿಸಿದೆ. ಈ ಹಿನ್ನೆಲೆಯಲ್ಲಿ, ನ್ಯಾಯಾಲಯವು ಮುಂದಿನ ವಿಚಾರಣೆಯನ್ನು ಮೇ 7ಕ್ಕೆ ಮುಂದೂಡಿದೆ.

MUDA scam investigation continues

MUDA Scam – ಸರ್ಕಾರಕ್ಕೆ ಕೋರ್ಟ್ ಛೀಮಾರಿ ಹಾಕಿದೆ: ಸ್ನೇಹಮಯಿ ಕೃಷ್ಣ

ನ್ಯಾಯಾಲಯದ ಈ ಆದೇಶದ ಕುರಿತು ಪ್ರತಿಕ್ರಿಯಿಸಿರುವ ದೂರುದಾರ ಸ್ನೇಹಮಯಿ ಕೃಷ್ಣ ಅವರು, “ಲೋಕಾಯುಕ್ತ ಅಧಿಕಾರಿಗಳು ಮುಖ್ಯಮಂತ್ರಿಗಳ ಕುಟುಂಬವನ್ನು ರಕ್ಷಿಸಲು ತನಿಖೆಯನ್ನು ಪೂರ್ಣಗೊಳಿಸದೆ ವರದಿ ಸಲ್ಲಿಸಿದ್ದಾರೆ. ಹೀಗಾಗಿ ನ್ಯಾಯಾಲಯವು ಅಂತಿಮ ವರದಿಯನ್ನು ಸಲ್ಲಿಸುವಂತೆ ಸೂಚಿಸಿದೆ. ತನಿಖಾಧಿಕಾರಿಗಳಿಗೆ ತನಿಖೆಯ ಬಗ್ಗೆ ಸ್ಪಷ್ಟ ಅರಿವಿಲ್ಲ. ನ್ಯಾಯಾಲಯದ ಇಂದಿನ ಆದೇಶವು ಸರ್ಕಾರಕ್ಕೆ ಛೀಮಾರಿ ಹಾಕಿದಂತಾಗಿದೆ” ಎಂದು ಹೇಳಿದ್ದಾರೆ.

ಮುಂದುವರೆದು ಮಾತನಾಡಿದ ಅವರು, “ಮುಖ್ಯಮಂತ್ರಿಗಳು ಅಧಿಕಾರವನ್ನು ದುರುಪಯೋಗಪಡಿಸಿಕೊಂಡು ಈ ಪ್ರಕರಣವನ್ನು ಮುಚ್ಚಿಹಾಕುವ ಪ್ರಯತ್ನಕ್ಕೆ ನಾನು ಅವಕಾಶ ನೀಡುವುದಿಲ್ಲ. ನನ್ನ ಬಳಿ ಇರುವ ದಾಖಲೆಗಳ ಆಧಾರದ ಮೇಲೆ ಸಿದ್ದರಾಮಯ್ಯ ಅವರಿಗೆ ಶಿಕ್ಷೆಯಾಗುವವರೆಗೂ ನಾನು ಹೋರಾಡುತ್ತೇನೆ. ಮುಖ್ಯಮಂತ್ರಿಗಳು ಕೂಡಲೇ ರಾಜೀನಾಮೆ ನೀಡಿ ತನಿಖೆಗೆ ಸಹಕಾರ ನೀಡಬೇಕು. ನನ್ನ ಹೋರಾಟವು ಮುಂದುವರೆಯುತ್ತದೆ” ಎಂದು ಅವರು ಪಟ್ಟು ಹಿಡಿದಿದ್ದಾರೆ.

MUDA Scam – ಸ್ನೇಹಮಯಿ ಕೃಷ್ಣ ಅವರ ತಕರಾರು ಅರ್ಜಿಯಲ್ಲೇನಿತ್ತು?

ದೂರುದಾರರಾದ ಸ್ನೇಹಮಯಿ ಕೃಷ್ಣ ಅವರು ಈ ಪ್ರಕರಣಕ್ಕೆ ಸಂಬಂಧಿಸಿದಂತೆ 39 ಪುಟಗಳ ಸುದೀರ್ಘ ತಕರಾರು ಅರ್ಜಿಯನ್ನು ಸಲ್ಲಿಸಿದ್ದರು. ಆ ಅರ್ಜಿಯಲ್ಲಿ, “ತನಿಖಾಧಿಕಾರಿಯು ನ್ಯಾಯಾಲಯಕ್ಕೆ ಸಲ್ಲಿಸಿರುವ ವರದಿಯು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ‘ಬಿ’ ಅಂತಿಮ ವರದಿಯಾಗಿರುವುದಿಲ್ಲ ಎಂದು ನಾನು ಭಾವಿಸುತ್ತೇನೆ. ಒಂದು ವೇಳೆ ‘ಬಿ’ ಅಂತಿಮ ವರದಿ ಸಲ್ಲಿಸಿದ್ದರೂ ಸಹ, ಮಾನ್ಯ ಸರ್ವೋಚ್ಚ ನ್ಯಾಯಾಲಯವು ‘ಇಂಡಿಯಾ ಕಾರೆಟ್ ಪ್ರೈ.ಲಿ. ವಿರುದ್ಧ ಕರ್ನಾಟಕ ರಾಜ್ಯ’ ಎಂಬ ಪ್ರಕರಣದ ತೀರ್ಪಿನಲ್ಲಿ ಹೇಳಿರುವಂತೆ, ನ್ಯಾಯಾಲಯವು ಆರೋಪಿಗಳಿಗೆ ಸಮನ್ಸ್ ಜಾರಿ ಮಾಡಿ ವಿಚಾರಣೆ ನಡೆಸಬಹುದು. ಹೀಗಾಗಿ, ಆ ತೀರ್ಪಿನ ಪ್ರತಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದು, ಅದರಲ್ಲಿನ ಅಂಶಗಳನ್ನು ಪರಿಗಣಿಸಿ ಸೂಕ್ತ ಆದೇಶವನ್ನು ನೀಡಬೇಕಾಗಿ ವಿನಂತಿಸುತ್ತೇನೆ” ಎಂದು ಅವರು ಉಲ್ಲೇಖಿಸಿದ್ದರು.

ಇದನ್ನೂ ಓದಿ: Muda Scam ಇಡಿ ತನಿಖೆಗೆ ಹೈಕೋರ್ಟ್ ಅನುಮತಿ – ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ?

ಇದಲ್ಲದೆ, “ತನಿಖಾಧಿಕಾರಿಯು 1 ರಿಂದ 4ನೇ ಆರೋಪಿಗಳ ವಿಚಾರದಲ್ಲಿ ಸಲ್ಲಿಸಿರುವ ವರದಿಯನ್ನು ತಿರಸ್ಕರಿಸಬೇಕು. ಲಭ್ಯವಿರುವ ಮತ್ತು ಮುಂದೆ ಲಭ್ಯವಾಗುವ ಸಾಕ್ಷ್ಯಾಧಾರಗಳ ಮೂಲಕ 1 ರಿಂದ 4ನೇ ಆರೋಪಿಗಳ ವಿರುದ್ಧ ಮಾಡಿರುವ ಆರೋಪವನ್ನು ಸಾಬೀತುಪಡಿಸಲು ಅಗತ್ಯವಾದ ಮುಂದಿನ ಕಾನೂನು ಪ್ರಕ್ರಿಯೆಗಳನ್ನು ನಡೆಸಲು ಅನುಮತಿ ನೀಡಬೇಕು. ಹಾಗೂ ನ್ಯಾಯಾಲಯಕ್ಕೆ ಸೂಕ್ತ ಮತ್ತು ನ್ಯಾಯಸಮ್ಮತ ಎಂದು ಕಂಡುಬರುವ ಇತರೆ ಸೂಕ್ತ ಆದೇಶಗಳನ್ನು ನೀಡಬೇಕೆಂದು” ಅವರು ನ್ಯಾಯಪೀಠಕ್ಕೆ ಮನವಿ ಮಾಡಿದ್ದರು.

ಈ ಬೆಳವಣಿಗೆಯು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮತ್ತಷ್ಟು ಸಂಕಷ್ಟವನ್ನು ತಂದೊಡ್ಡಬಹುದೇ ಎಂಬುದನ್ನು ಕಾದು ನೋಡಬೇಕಿದೆ. ಮುಂದಿನ ವಿಚಾರಣೆಯು ಮೇ 7 ರಂದು ನಡೆಯಲಿದೆ.

by Adminhttp://ismkannadanews.com
Welcome to ISM Kannada News, if you want to contact us, then feel free to say anything about www.ismkannadanews.com
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular