ಗುಡಿಬಂಡೆ: ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗ (7th Pay Commission) ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ತಹಸೀಲ್ದಾರರ ಮೂಲಕ ಸರ್ಕಾರಕ್ಕೆ ಮನವಿ ಪತ್ರವನ್ನು ಸಲ್ಲಿಸಲಾಯಿತು.
ಈ ವೇಳೆ ಮಾತನಾಡಿದ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಕೆ.ವಿ.ನಾರಾಯಣಸ್ವಾಮಿ, ರಾಜ್ಯ ಸರ್ಕಾರಿ ನೌಕರರ ಬಹುದಿನಗಳ ಬೇಡಿಕೆಯಾದ 7ನೇ ವೇತನ ಆಯೋಗ (7th Pay Commission) ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಮಾಡುತ್ತಾ ಬಂದಿದ್ದೇವೆ. ರಾಜ್ಯದಲ್ಲಿ 2.60 ಲಕ್ಷ ಹುದ್ದೆಗಳು ಖಾಲಿಯಿದ್ದರೂ ಸಹ ಸಾರ್ವಜನಿಕ ಹಿತದೃಷ್ಟಿಯಿಂದ ಸರ್ಕರದ ಯೋಜನೆಗಳನ್ನು ಜಾರಿಗೊಳಿಸಲು ಸರ್ಕಾರಿ ನೌಕರರು ಶ್ರಮಿಸುತ್ತಿದ್ದಾರೆ. ಅದರಲ್ಲೂ ರಾಜ್ಯದ ಅಭಿವೃದ್ದಿ ಸೂಚ್ಯಂಕ ಬೆಳವಣಿಗೆ ಹಾಗೂ ಜಿ.ಎಸ್.ಟಿ. ತೆರಿಗೆ ಸಂಗ್ರಹಣೆಯಲ್ಲೂ ಇಡೀ ದೇಶಕ್ಕೆ ಮಾದರಿಯಾಗಲು ಸರ್ಕಾರಿ ನೌಕರರ ಪಾತ್ರ ಪ್ರಮುಖವಾಗಿದೆ. ಆದರೆ ಸರ್ಕಾರ ನೌಕರರ ಬೇಡಿಕೆಗಳನ್ನು ಈಡೇರಿಸದೇ ಇರುವುದು ವಿಷಾದನೀಯವಾದ ಸಂಗತಿಯಾಗಿದೆ.
ಇನ್ನೂ 7ನೇ ವೇತನ ಆಯೋಗ ಜಾರಿ(7th Pay Commission), ಎನ್.ಪಿ.ಎಸ್ ರದ್ದು ಮಾಡಿ, ಒಪಿಎಸ್ ಜಾರಿ ಮಾಡುವುದು, ಆರೋಗ್ಯ ಸಂಜೀವಿನಿ ಅನುಷ್ಟಾನಗೊಳಿಸುವಂತಹ ಬೇಡಿಕೆಗಳನ್ನು ಈಡೇರಿಸುವಂತೆ ಸುಮಾರು ದಿನಗಳಿಂದ ಮನವಿ ಮಾಡುತ್ತಾ ಬಂದಿದ್ದೇವೆ. ಆದರೆ ಸರ್ಕಾರ ಮಾತ್ರ ನಮ್ಮ ಬೇಡಿಕೆಗಳನ್ನು ಈಡೇರಿಸುತ್ತಿಲ್ಲ. ಆದ್ದರಿಂದ ಕೆಲವು ದಿನಗಳ ಹಿಂದೆಯಷ್ಟೆ ನಡೆದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳ ಸಭೆಯಲ್ಲಿ ಬೇಡಿಕೆಗಳನ್ನು ಈಡೇರಿಸಲು ಹೋರಾಟ ಹಮ್ಮಿಕೊಳ್ಳಲು ತೀರ್ಮಾನಿಸಲಾಗಿದೆ. ಸಭೆಯಲ್ಲಿ ತೀರ್ಮಾನಿಸಿದಂತೆ ಮೊದಲ ಭಾಗವಾಗಿ ಇಂದು ತಹಸೀಲ್ದಾರ್ ರವರ ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಲಾಗಿದೆ ಎಂದರು.
ಈ ಸಮಯದಲ್ಲಿ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳು, ಜಿಪಿಟಿ ಸಂಘದ ಪದಾಧಿಕಾರಿಗಳು, ಎನ್.ಪಿ.ಎಸ್ ಸಂಘದ ಪದಾಧಿಕಾರಿಗಳು ಸೇರಿದಂತೆ ಹಲವರು ಇದ್ದರು.