ರಾಜ್ಯ ರಾಜಕಾರಣ ಮಾತ್ರವಲ್ಲದೇ ರಾಷ್ಟ್ರ ರಾಜಕಾರಣದಲ್ಲೂ ಭಾರಿ ಸದ್ದು ಮಾಡುತ್ತಿರುವ ಮೂಡಾ ಹಗರಣ ಪ್ರಕರಣದ ಹಿನ್ನೆಲೆ ಸಿಎಂ ಸಿದ್ದರಾಮಯ್ಯನವರ ರಾಜೀನಾಮೆಗೆ ವಿರೋಧ ಪಕ್ಷಗಳು ಸೇರಿದಂತೆ ಅನೇಕರು ಒತ್ತಾಯ ಮಾಡುತ್ತಿದೆ. ಈ ಸಮಯದಲ್ಲಿ ರಾಜ್ಯದಲ್ಲಿ ಸಿಎಂ ಬದಲಾವಣೆಯ ಕೂಗೂ ಸಹ ಕೇಳಿಬರುತ್ತಿದೆ. ಈ ನಡುವೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ರವರು ಎ.ಐ.ಸಿ.ಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ರವರನ್ನು ಭೇಟಿಯಾಗಿ (Muda Scam) ಮಾತುಕತೆ ನಡೆಸಿದ್ದಾರೆ. ಇದೀಗ ಈ ಭೇಟಿ ಭಾರಿ ಮಹತ್ವ ಪಡೆದುಕೊಂಡಿದೆ ಎಂದು ಹೇಳಲಾಗುತ್ತಿದೆ.
ಇತ್ತೀಚಿಗಷ್ಟೆ ದಲಿತ ಸಚಿವರೊಂದಿಗೆ ಸತೀಶ್ ಜಾರಕಿಹೊಳಿ ಸಭೆ ನಡೆಸಿದ್ದರು. ಇದೀಗ ದೆಹಲಿಯಲ್ಲಿ ಮಲ್ಲಿಕಾರ್ಜುನ್ ಖರ್ಗೆ ರವರನ್ನು ಅವರ ನಿವಾಸದಲ್ಲಿ ಭೇಟಿಯಾಗಿದ್ದಾರೆ. ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ಬಗ್ಗೆ ಚರ್ಚೆ ನಡೆಸಿದ್ದಾರೆ ಎಂದು ಹೇಳಲಾಗಿದೆ. ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ನಾವು ಸಿದ್ದರಾಮಯ್ಯನವರ ಬೆಂಬಲಕ್ಕೆ ನಿಂತಿದ್ದೇವೆ. ಪ್ರತಿ ಹಂತದಲ್ಲೂ ನಾವು ಅವರನ್ನು ಸಮರ್ಥನೆ ಮಾಡುತ್ತಿದ್ದೇವೆ. ಒಂದು ವೇಳೆ ಸಿಎಂ ಸಿದ್ದರಾಮಯ್ಯನವರು ರಾಜೀನಾಮೆ ಕೊಡುವ ಪರಿಸ್ಥಿತಿ ಎದುರಾದರೇ ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡದ ನಾಯಕರಿಗೆ ಸಿಎಂ ಸ್ಥಾನ ಸಿಗಬೇಕು. ಇದಕ್ಕಾಗಿ ನಾವೆಲ್ಲರೂ ಒಗ್ಗಟ್ಟಾಗಿ ನಿಂತು ದಲಿತ ಸಮುದಾಯಕ್ಕೆ ಸಿಎಂ ಸ್ಥಾನ ಸಿಗುವಂತೆ ಮಾಡಬೇಕೆಂದು ಖರ್ಗೆ ರವರ ಜೊತೆಗೆ ಚರ್ಚೆ ನಡೆದಿದೆ ಎಂಬ ಮಾತುಗಳು ಕೇಳಿಬರುತ್ತಿವೆ.
ಸತೀಶ್ ಜಾರಕಿಹೊಳಿ ಹಾಗೂ ಮಲ್ಲಿಕಾರ್ಜುನ್ ಖರ್ಗೆರವರ ಭೇಟಿ ಪೊಟೋ ಇಲ್ಲಿದೆ ನೋಡಿ
ಕಳೆದೆರಡು ದಿನಗಳ ಹಿಂದೆಯಷ್ಟೆ ಸಮಾಜ ಕಲ್ಯಾಣ ಸಚಿವ ಮಹದೇವಪ್ಪ, ಗೃಹ ಸಚಿವ ಪರಮೇಶ್ವರ್ ಜೊತೆಗೆ ಸತೀಶ್ ಜಾರಕಿಹೊಳಿ ರಹಸ್ಯ ಮಾತುಕತೆ ನಡೆಸಿದ್ದರು. ಇದು ಭಾರಿ ಸದ್ದು ಮಾಡಿತ್ತು. ಇದೀಗ ಖರ್ಗೆಯವರ ಜೊತೆಗೂ ಚರ್ಚೆ ನಡೆದಿದ್ದು, ಇದು ದಲಿತ ಸಿಎಂ ಕೂಗನ್ನು ಮತ್ತೆ ಮುನ್ನಲೆಗೆ ತಂದಿದೆ. ಮುಡಾ ಹಗರಣ ಕೇಳಿಬಂದಾಗಿನಿಂದ ರಾಜ್ಯದಲ್ಲಿ ಸಿಎಂ ಬದಲಾವಣೆಯ ಕೂಗು ಕೇಳಿಬರುತ್ತಿದೆ. ಡಿಕೆ ಶಿವಕುಮಾರ್, ಡಾ.ಜಿ.ಪರಮೇಶ್ವರ್, ಮಲ್ಲಿಕಾರ್ಜುನ ಖರ್ಗೆ, ಸತೀಶ್ ಜಾರಕಿಹೊಳಿ, ಎಂ.ಬಿ.ಪಾಟೀಲ್ ರವರ ಹೆಸರುಗಳು ಸಿಎಂ ಸ್ಥಾನಕ್ಕೆ ಕೇಳಿಬರುತ್ತಿವೆ. ಜೊತೆಗೆ ಅವರು ಸಹ ಪರೋಕ್ಷವಾಗಿ ತಾವು ಸಿಎಂ ಸ್ಥಾನದ ಆಕಾಂಕ್ಷಿಗಳು ಎಂದು ಹೇಳಿಕೆಗಳನ್ನು ನೀಡಿದ್ದರು.