B Y Vijayendra : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸಿಎಂ ಸಿದ್ದರಾಮಯ್ಯನವರ ಸರ್ಕಾರದ ವಿರುದ್ದ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸಿದ್ದರಾಮಯ್ಯನವರು (Siddaramaiah) ಸಿಎಂ ಆದ ಬಳಿಕ ರಾಜ್ಯ ಸರ್ಕಾರ ಆತ್ಮಹತ್ಯೆ ಭಾಗ್ಯವನ್ನು ಕರ್ನಾಟಕ ರಾಜ್ಯಕ್ಕೆ ದಯಪಾಲಿಸಿದೆ. ಕಾಂಗ್ರೇಸ್ ಸರ್ಕಾರದ ಆಡಳಿತಾವಧಿಯಲ್ಲಿ ಸರ್ಕಾರಿ ಪ್ರಾಯೋಜಿತ ಆತ್ಮಹತ್ಯೆಗಳು ಅಥವಾ ಸರ್ಕಾರದ ಕುಮ್ಮಕ್ಕಿನ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿವೆ. ಈ ಹಿಂದೆ ಈ ರೀತಿಯ ಪ್ರಕರಣಗಳನ್ನು ಎಂದೂ ನೋಡಿರಲಿಲ್ಲ, ಕೇಳಿರಲಿಲ್ಲ ಎಂದು ಬಿ.ವೈ.ವಿಜಯೇಂದ್ರ (B Y Vijayendra) ಆಕ್ರೋಷ ಹೊರಹಾಕಿದ್ದಾರೆ.
ಈ ಕುರಿತು ಮಾತನಾಡಿದ ಬಿ.ವೈ.ವಿಜಯೇಂದ್ರ, (B Y Vijayendra) ಕೆಲವು ತಿಂಗಳುಗಳ ಹಿಂದೆಯಷ್ಟೆ ಭ್ರಷ್ಟಾಚಾರ ಬಯಲಾದ ಹಿನ್ನೆಲೆಯಲ್ಲಿ ವಾಲ್ಮೀಕಿ ನಿಗಮದ ಅಕೌಂಟೆಂಟ್ ಚಂದ್ರಶೇಖರ್ ಮೊದಲು ಆತ್ಮಹತ್ಯೆ ಮಾಡಿಕೊಂಡರು. ಈ ಪ್ರಕರಣದ ಸಂಬಂಧ ಬಿಜೆಪಿ ಹೋರಾಟ ಮಾಡಿದ ಹಿನ್ನೆಲೆಯಲ್ಲಿ ಸಚಿವ ನಾಗೇಂದ್ರ ರಾಜೀನಾಮೆ ಕೊಟ್ಟರು. ಬಳಿಕ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪಿ.ಎ. ಹೆಸರು ಬರೆದಿಟ್ಟು ರುದ್ರಣ್ಣ ಯಡವಣ್ಣವರ್ ಆತ್ಮಹತ್ಯೆ ಮಾಡಿಕೊಂಡಿದ್ದರು. ಅದೇ ರೀತಿ ದಾವಣಗೆರೆಯಲ್ಲೊಬ್ಬ ಗುತ್ತಿಗೆದಾರ ಬಾಕಿ ಹಣ ಸಿಗದೇ ಆತ್ಮಹತ್ಯೆ ಮಾಡಿಕೊಂಡಿದ್ದರು. ಕ್ರಷರ್ ಲಾರಿ ಮಾಲೀಕರೊಬ್ಬರು ಲಂಚ ಕೊಡಲಾಗದೇ ಮಾಗಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಯಾದಗಿರಿ ಪಿ.ಎಸ್.ಐ ಪರಶುರಾಮ ಎಂಬುವವರು ಅಲ್ಲಿನ ಶಾಸಕರ ಪುತ್ರನ ಕಾಟ ತಡೆಯಲಾಗದೇ ಆತ್ಮಹತ್ಯೆ ಮಾಡಿಕೊಂಡರು ಎಂದು ಇತ್ತೀಚಿಗೆ ನಡೆದ ಆತ್ಮಹತ್ಯೆ ಘಟನೆಗಳ ಬಗ್ಗೆ ವಿವರಿಸಿದರು.
ಇನ್ನೂ ಇತ್ತೀಚಿಗೆ ಸಚಿನ್ ಸಾವಿನ ಪ್ರಕರಣದ ಕುರಿತು ಮಾತನಾಡಿದ್ದು, ಈ ಘಟನೆಯ ಸಂಬಂಧ ಸಚಿವ ಪ್ರಿಯಾಂಕ ಖರ್ಗೆಯವರ ರಾಜೀನಾಮೆ ಪಡೆದು, ದುರ್ಘಟನೆಯ ಸಿಬಿಐ ತನಿಖೆ ಮಾಡಬೇಕು ಆಗ್ರಹಿಸಿದರು. ನ್ಯಾಯಕ್ಕಾಗಿ ಸಿಬಿಐ ತನಿಖೆಗೆ ಸಚಿನ್ ಕುಟುಂಬವೂ ಒತ್ತಾಯಿಸಿದೆ. ಹಿಂದೆ, ಇದೇ ಸರ್ಕಾರದ ಸಚಿವ ನಾಗೇಂದ್ರ ಅವರೂ ವಾಲ್ಮೀಕಿ ನಿಗಮದ ಹಗರಣದಲ್ಲಿ ಸಿಲುಕಿ ರಾಜೀನಾಮೆ ಕೊಟ್ಟಿದ್ದಾರೆ. ಒಂದು ಕ್ಷಣವೂ ತಡ ಮಾಡದೆ, ಪ್ರಿಯಾಂಕ ಖರ್ಗೆಯವರ ರಾಜೀನಾಮೆ ಪಡೆದುಕೊಳ್ಳಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆಗ್ರಹಿಸಿದರು.
ಇನ್ನೂ ಮೇಧಾವಿ ಪ್ರಿಯಾಂಕ್ ಖರ್ಗೆಯವರಿಗೆ ಮರೆವು ಜಾಸ್ತಿ. ಹಿಂದೆ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಈಶ್ವರಪ್ಪ ಅವರ ಮೇಲೆ ಆರೋಪ ಬಂದಾಗ, ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟದ್ದನ್ನು ಪ್ರಿಯಾಂಕ್ ಮರೆಯಬಾರದು. ಮಡಿಕೇರಿಯಲ್ಲಿ ಪೊಲೀಸ್ ಅಧಿಕಾರಿ ಗಣಪತಿ ಆತ್ಮಹತ್ಯೆ ಮಾಡಿಕೊಂಡಿದ್ದು, ಇದೇ ಸಿದ್ದರಾಮಯ್ಯನವರು ಸಿಎಂ ಆಗಿದ್ದಾಗ ಆ ಪ್ರಕರಣದಲ್ಲಿ ಅಂದಿನ ಗೃಹ ಸಚಿವ ಜಾರ್ಜ್ ಅವರು ಕೂಡ ರಾಜೀನಾಮೆ ಕೊಟ್ಟು, ಸಿಬಿಐ ತನಿಖೆ ಆಗಿ ಕ್ಲೀನ್ ಚಿಟ್ ಬಂದಿತ್ತು ಎಂದು ಹೇಳಿದರು. ಪ್ರಿಯಾಂಕ್ ಖರ್ಗೆ ಅವರ ಇಲಾಖೆ ಗ್ರಾಮೀಣಾಭಿವೃದ್ಧಿ ಮತ್ತು ಐಟಿ, ಬಿಟಿ ಮಾತ್ರವಲ್ಲ, ಅವರು ಸರ್ವ ಇಲಾಖೆಯ ಸಚಿವರು. ಸದನದಲ್ಲಿ ಗೃಹ ಸಚಿವರಿದ್ದರೂ, ಸಿಎಂ ಕುರಿತು ಪ್ರಶ್ನೆ ಇದ್ದರೂ ಅವರ ಪರವಾಗಿ ಇವರು ಎದ್ದೇಳುತ್ತಾರೆ. ಗಲಾಟೆ ಮಾಡುತ್ತಾರೆ ಪ್ರಿಯಾಂಕ್ ಖರ್ಗೆ ಅವರು ಬಹಳ ಜ್ಞಾನಿ, ಮೇಧಾವಿ, ಬುದ್ಧಿವಂತರು, ಅಷ್ಟೇ ಪ್ರಭಾವಿ, ಶಕ್ತಿಶಾಲಿ ಮುಖಂಡರು ಎಂದು ಟೀಕಿಸಿದರು.