CPIM – ರೈತರ, ದಲಿತರ, ಅಲ್ಪಸಂಖ್ಯಾತರ,ಬಡವರ, ಕೂಲಿ ಕಾರ್ಮಿಕರ ಸಮಸ್ಯೆಗಳ ಪರಿಹಾರಕ್ಕಾಗಿ ನಿರಂತರವಾಗಿ ಹೋರಾಟ ಮಾಡುವ ಏಕೈಕ ಪಕ್ಷ ಸಿಪಿಐ(ಎಂ) ಪಕ್ಷವಾಗಿದೆ. ದೇಶ ಮತ್ತು ರಾಜ್ಯದಲ್ಲಿ ದುರಾಡಳಿತ ನಡೆಸುತ್ತಿರುವ ಬಿಜೆಪಿ ಮತ್ತು ಕಾಂಗ್ರೆಸ್ ಸರ್ಕಾರಕ್ಕೆ ಮುಂದಿನ ದಿನಗಳಲ್ಲಿ ಜನರು ತಕ್ಕಪಾಠ ಕಲಿಸಲಿದ್ದಾರೆ ಎಂದು ಸಿಪಿಐ(ಎಂ) ಪಾಲಿಟ್ ಬ್ಯೂರೋ ಸದಸ್ಯ ಬಿ.ವಿ. ರಾಘವಲು ಭವಿಷ್ಯ ನುಡಿದರು.
18ನೇ ಸಿಪಿಐ(ಎಂ) ಜಿಲ್ಲಾ ಸಮ್ಮೇಳನದ ಅಂಗವಾಗಿ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಪಟ್ಟಣದ ಡಾ.ಎಚ್.ಎನ್.ವೃತ್ತದಲ್ಲಿ ಆಯೋಜಿಸಲಾಗಿದ್ದ ಬಹಿರಂಗ ಸಭೆಯಲ್ಲಿ ಭಾಗವಹಿಸಿ ಮಾತನಾಡಿ, ರೈತ, ಕೂಲಿ ಸೇರಿದಂತೆ ದೇಶದ ಬಡವರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ನಿರಂತರವಾಗಿ ಶ್ರಮಿಸುತ್ತಿರುವ ಏಕೈಕ ಪಕ್ಷ ಸಿಪಿಐ(ಎಂ) ಆಗಿದೆ ಆದರೆ ಕೇಂದ್ರದಲ್ಲಿ ಅಧಿಕಾರ ನಡೆಸುತ್ತಿರುವ ಮೋದಿ ನೇತೃತ್ರ್ವದ ಕೇಂದ್ರ ಸರ್ಕಾರ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿ ದೇಶದ ಬಡವರನ್ನು ಅಂತ್ರಸ್ಥಿತಿಗೆ ತಂದು ನಿಲ್ಲಿಸಿದೆ ಅಲ್ಲದೆ ಕಾರ್ಮಿಕರ,ರೈತ ವಿರೋಧಿ, ಜನವಿರೋಧಿ ನೀತಿಗಳನ್ನು ಜಾರಿಗೆ ತಂದು ದುರಾಡಳಿತ ನಡೆಸುತ್ತಿದೆ ಅದೇ ರೀತಿಯಲ್ಲಿ ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಆಡಳಿತ ನಡೆಸುತ್ತಿದೆ ಎಂದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ ಅವರು ಮುಂದಿನ ದಿನಗಳಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳಿಗೆ ಜನರು ತಕ್ಕಪಾಠ ಕಲಿಸಲಿದ್ದಾರೆ ಎಂದರು.
ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಯು ಬಸವರಾಜು ಮಾತನಾಡಿ, ದೇಶದ ಜನರು ಬಿಜೆಪಿಯನ್ನು ತಿರಸ್ಕರಿಸಿದ್ದರೂ ಸಹ ಎನ್‍ಡಿಎ ಮೈತ್ರಿಕೂಟದ ಮೂಲಕ ಮತ್ತೇ ಅಧಿಕಾರಕ್ಕೆ ಬಂದ ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರ ಬಂಡವಾಳಶಾಹಿಗಳ ಪರವಾಗಿ ಆಡಳಿತ ನಡೆಸುತ್ತಿದ್ದಾರೆ ಎಂದು ಕೇಂದ್ರ ಬಿಜೆಪಿ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದರು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಜನರ, ರೈತ, ಬಡವರ, ಕೂಲಿ ಕಾರ್ಮಿಕರ, ನಿರೋದ್ಯೋಗಿ ಯುವ ಜನತೆಯ ಸಮಸ್ಯೆಗಳ ಪರಿಹಾರ ಕಲ್ಪಿಸುವ ಬಗ್ಗೆ ಕಾಳಜಿವಹಿಸುತ್ತಿಲ್ಲ. ರೈತರ, ಮಹಿಳೆಯರ ಮತಗಳಿಂದ ಅಧಿಕಾರಕ್ಕೆ ಬಂದಿರುವ ಪ್ರಧಾನಿ ಮೋದಿ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರಗಳು ಶ್ರೀಮಂತರ ಪರವಾಗಿ ಆಡಳಿತ ನಡೆಸುವ ಮೂಲಕ ಬಡಜನತೆಗೆ ಅನ್ಯಾಯ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಸಿಪಿಐ(ಎಂ) ಮುಖಂಡ ಡಾ.ಅನಿಲ್ ಕುಮಾರ್ ಮಾತನಾಡಿದರು. ವೇದಿಕೆ ಕಾರ್ಯಕ್ರಮಕ್ಕೂ ಮುನ್ನಾ ಬಾಗೇಪಲ್ಲಿ ಪಟ್ಟಣದ ಮುಖ್ಯರಸ್ತೆಯಲ್ಲಿ ಕಾರ್ಯಕರ್ತರು ಮೆರವಣಿಗೆ ನಡೆಸಿದರು. ಈ ಸಂದರ್ಭದಲ್ಲಿ ಸಿಪಿಐ(ಎಂ) ಮುಖಂಡರಾದ ಕೆ.ಎನ್. ಉಮೇಶ್, ಜೆ.ಸಿಬಯ್ಯಾರೆಡ್ಡಿ, ರಘುರಾಮರೆಡ್ಡಿ, ಚನ್ನರಾಯಪ್ಪ, ಓಬಳರಾಜು, ಕೆ.ನಾಗರಾಜ್, ಸಿದ್ದಗಂಗಪ್ಪ, ಮುನಿವೆಂಕಟಪ್ಪ ಮತ್ತಿತರರು ಇದ್ದರು.