ಬಾಗೇಪಲ್ಲಿ: ರೈತರಿಗೆ ಸಮರ್ಪಕವಾಗಿ ಬೆಳೆ ಪರಿಹಾರ ವಿತರಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಿಪಿಐ(ಎಂ) ಹಾಗೂ ಕರ್ನಾಟಕ ರಾಜ್ಯ ಪ್ರಾಂತ ರೈತ ಸಂಘದ ಕಾರ್ಯಕರ್ತರು ತಹಸೀಲ್ದಾರ್ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಪ್ರತಿಭಟನಕಾರರನ್ನು ಉದ್ದೇಶಿಸಿ ಸಿಪಿಐ(ಎಂ) ಮುಖಂಡರು ಮಾತನಾಡಿ, ಮಳೆಯ ಅಭಾವದಿಂದ ರಾಜ್ಯದಲ್ಲಿ ಜಾನುವಾರುಗಳಿಗೆ ನೀರು ಮತ್ತು ಮೇವಿನ ಸಮಸ್ಯೆ ಎದುರಿಸುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದ ಅವರು ಮಳೆ ಕೊರತೆಯಿಂದ ಸಂಕಷ್ಟದಲ್ಲಿರುವ ರೈತರಿಗೆ ಸಮರ್ಪಕವಾಗಿ ಬೆಳೆ ಪರಿಹಾರ ವಿತರಿಸಬೇಕು, ಯಾವುದೇ ಕಾರಣಕ್ಕೂ ವಿದ್ಯುತ್ ಖಾಸಗೀಕರಣ ಮಾಡಬಾರದು,ಬೆಂಬಲ ಬೆಲೆ ನೀಡಬೇಕು, ರೈತರ ಕೃಷಿ ಚಟುವಟಿಕೆಗಳಿಗೆ ಉತ್ತೇಜನ ನೀಡುವ ಸಲುವಾಗಿ ರೈತರಿಗೆ ಗುಣಮಟ್ಟದ ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳನ್ನು ಉಚಿತವಾಗಿ ನೀಡಬೇಕು ಎಂದು ಆಗ್ರಹಿಸಿದರು.
ರಾಜ್ಯದ ಪ್ರತಿಯೊಂದು ಗ್ರಾ.ಪಂ ವ್ಯಾಪ್ತಿಯಲ್ಲಿ ಸ್ಮಶಾನಕ್ಕೆ ಭೂಮಿಯನ್ನು ಮಂಜೂರು ಮಾಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದರು. ನಂತರ ಪ್ರತಿಭಟನಕಾರರು ಗ್ರೇಡ್ -2 ತಹಸೀಲ್ದಾರ್ ರವರಿಗೆ ಮನವಿ ಪತ್ರವನ್ನು ಸಲ್ಲಿಸಿದರು.