ಕರ್ನಾಟಕದಲ್ಲಿ ರಾಜ್ಯದಲ್ಲಿ ಕೆಲವು ದಿನಗಳಿಂದ ಮಳೆಯಾಗುತ್ತಿದ್ದು, ಬಿಸಿಲಿನ ತಾಪ ಕಡಿಮೆಯಾಗಿದೆ ಎನ್ನಬಹುದಾಗಿದೆ. ಈಗಾಗಲೇ ಮಳೆಯಿಂದ ಕೆಲವು ಕಡೆ ಜನಜೀವನ ಅಸ್ತವ್ಯಸ್ಥ ಸಹ ಆಗಿದೆ. ಇದೀಗ ಹವಾಮಾನ ಇಲಾಖೆ ಮತ್ತೊಂದು ಎಚ್ಚರಿಕೆ ನೀಡಿದೆ. ಕರ್ನಾಟಕ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.
ಬೆಂಗಳೂರು ಸೇರಿದಂತೆ ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಕೊಡಗು, ಹಾಸನ, ಮೈಸೂರು, ಮಂಡ್ಯ, ಕೋಲಾರ, ರಾಮನಗರ, ಶಿವಮೊಗ್ಗ ಹಾಗೂ ತುಮಕೂರು ಭಾಗಗಳಲ್ಲಿ ಮೇ.23ರವರೆಗೆ ಅತಿ ಹೆಚ್ಚು ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಆರೆಂಜ್ ಹಾಗೂ ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಮೇ.20 ರಂದೂ ಸಹ ಶಿವಮೊಗ್ಗ, ಕೊಡಗು ಹಾಗೂ ಚಿಕ್ಕಮಗಳೂರಿನಲ್ಲಿ ಅತಿ ಹೆಚ್ಚು ಮಳೆಯಾಗಲಿದೆ. ಜೊತೆಗೆ ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ,ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ಚಾಮರಾಜನಗರ, ದಕ್ಷಿಣ ಕನ್ನಡ, ಉಡುಪಿ ಉತ್ತರ ಕನ್ನಡ ಜಿಲ್ಲೆಗಳಲ್ಲೂ ಮಳೆಯಾಗಲಿದೆ. ಉತ್ತರ ಒಳನಾಡಿನಲ್ಲಿ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ ಎನ್ನಲಾಗಿದೆ.
ಇನ್ನೂ ನಿನ್ನೆ (ಮೇ.18) ರಂದು ಸಹ ರಾಜ್ಯದ ಹಲವು ಕಡೆ ಭಾರಿ ಮಳೆಯಾಗಿದ್ದು, ಕೆಲವೊಂದು ಕಡೆ ಮಳೆ ನೀರು ರಸ್ತೆಯಲ್ಲಿ ನದಿಯಂತೆ ಹರಿದಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತವರಣವಿರಲಿದ್ದು, ಸಂಜೆಯ ವೇಳೆ ಮಳೆಯಾಗುವ ಮುನ್ಸೂಚನೆ ಇದೆ. ನಗರದಲ್ಲಿ 29.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 22.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 31.2ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಎಚ್ಎಎಲ್ನಲ್ಲಿ 28.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.