Local News – ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ಪಟ್ಟಣದ ನ್ಯಾಯಾಲಯ ಆವರಣದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘದ ವತಿಯಿಂದ ಮಾ.8 ರಂದು ರಾಷ್ಟ್ರೀಯ ಲೋಕ ಅದಾಲತ್ ಹಮ್ಮಿಕೊಂಡಿದ್ದು, ಈ ಕಾರ್ಯಕ್ರಮವನ್ನು ಸಾರ್ವಜನಿಕರು ಸದ್ಬಳಕೆ ಮಾಡಿಕೊಳ್ಳಬೇಕೆಂದು ಜೆ.ಎಂ.ಎಫ್.ಸಿ ನ್ಯಾಯಾಧಶೀ ಎಂ.ಹರೀಶ್ ತಿಳಿಸಿದರು.

ಈ ಸಂಬಂಧ ಗುಡಿಬಂಡೆ ಪಟ್ಟಣದ ಜೆ.ಎಂ.ಎಫ್.ಸಿ ನ್ಯಾಯಾಲಯದಲ್ಲಿ ಏರ್ಫಡಿಸಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಮಾ. 8 ರಂದು ರಾಷ್ಟ್ರೀಯ ಲೋಕ್ ಅದಾಲತ್ ಹಮ್ಮಿಕೊಳ್ಳಲಿದ್ದು, ನ್ಯಾಯಾಲಯದಲ್ಲಿ ಬಾಕಿ ಇರುವ ರಾಜಿಯಾಗಬಲ್ಲ ಹಾಗೂ ವ್ಯಾಜ್ಯಪೂರ್ವ ಪ್ರಕರಣಗಳನ್ನು ಇತ್ಯರ್ಥಪಡಿಸಿ ಕೊಂಡು ನೆಮ್ಮದಿಯ ಜೀವನ ರೂಪಿಸಿಕೊಳ್ಳಬೇಕು. ವಿವಾದಗಳನ್ನು ಸೌಹಾರ್ದಯುತವಾಗಿ ಬಗೆಹರಿಸಿಕೊಳ್ಳಲು ರಾಷ್ಟ್ರೀಯ ಲೋಕ ಅದಾಲತ್ ಒಂದು ಉತ್ತಮ ಅವಕಾಶವಾಗಿದ್ದು ತಾಲೂಕಿನ ಹಾಗೂ ನ್ಯಾಯಾಲಯ ವ್ಯಾಪ್ತಿಯ ಕಕ್ಷಿದಾರರು ಸದುಪಯೋಗ ಪಡೆದು ಶಾಶ್ವತವಾಗಿ ಪರಿಹಾರ ಕಂಡುಕೊಳ್ಳಬೇಕು. ವ್ಯಾಜ್ಯ ಪೂರ್ವ ಹಾಗೂ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ಮಾ. 8 ರಂದು ನಿಗದಿಯಾಗಿರುವ ಲೋಕ ಅದಾಲತ್ ಮೂಲಕ ತಕ್ಷಣ ಬಗೆಹರಿಸಿಕೊಳ್ಳಬಹುದು ಎಂದು ತಿಳಿಸಿದರು.
ಇನ್ನೂ ರಾಜಿಯಾಗುವ ಪ್ರಕರಣಗಳನ್ನು ತ್ವರಿತವಾಗಿ ವಿಲೇವಾರಿ ಮಾಡುವ ಸಲುವಾಗಿ ರಾಷ್ಟ್ರ ಮಟ್ಟದಿಂದ ತಾಲ್ಲೂಕು ಮಟ್ಟದವರೆಗೂ ಅದಾಲತ್ ನಡೆಸಲಾಗುತ್ತಿದೆ. ಬ್ಯಾಂಕ್, ಅಪಘಾತ, ಸಣ್ಣಪುಟ್ಟ ಜಗಳ, ಜನನ ಪ್ರಮಾಣ ಪತ್ರ, ನಂತಹ ಪ್ರಕರಣಗಳು ಸೇರಿದಂತೆ ಕಕ್ಷಿದಾರರು ಇಚ್ಛಿಸಿದಲ್ಲಿ ಕಾನೂನು ವ್ಯಾಪ್ತಿಯಲ್ಲಿ ಅವಕಾಶ ಇರುವ ಎಲ್ಲಾ ರೀತಿಯ ಪ್ರಕರಣಗಳನ್ನು ಅದಾಲತ್ ನಲ್ಲಿ ವಿಲೇವಾರಿ ಮಾಡಲಾಗುವುದು. ಕಕ್ಷಿದಾರರು ರಾಜಿ ಅಥವಾ ಸಂಧಾನದ ಮೂಲಕ ಪ್ರಕರಣಗಳನ್ನು ಸುಲಭವಾಗಿ ಮತ್ತು ಶೀಘ್ರವಾಗಿ ಯಾವುದೇ ಶುಲ್ಕವಿಲ್ಲದೆ ಇತ್ಯರ್ಥ ಪಡಿಸಿಕೊಳ್ಳಬಹುದು. ಇದರಿಂದ ಪಕ್ಷಗಾರರ ಮಧ್ಯದಲ್ಲಿರುವ ವೈಮನಸ್ಸು ಕಡಿಮೆಯಾಗಿ ಸೌಹಾರ್ದತೆ ಹೆಚ್ಚಾಗುತ್ತದೆ, ಕಕ್ಷಿದಾರರಿಗೆ ಸಮಯ ಹಾಗೂ ಹಣ ಉಳಿತಾಯವಾಗುತ್ತದೆ. ಜೀವನ ಪೂರ್ತಿ ನ್ಯಾಯಾಲಯಕ್ಕೆ ಅಲೆದಾಡುವ ಸಮಸ್ಯೆಯು ಸಹ ತಪ್ಪುತ್ತದೆ. ಈ ಮೂಲಕ ನ್ಯಾಯಾಲಯದಲ್ಲಿ ಹೆಚ್ಚಾಗುತ್ತಿರುವ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿ ನ್ಯಾಯಾಧೀಶರು ಹೆಚ್ಚು ಅವಶ್ಯಕತೆ ಹಾಗೂ ಕಾನೂನಿನ ಸಂಕೀರ್ಣತೆ ಇರುವಂತಹ ಪ್ರಕರಣಗಳಿಗೆ ಹೆಚ್ಚು ಒತ್ತು ನೀಡಿ ನ್ಯಾಯಾಲಯಗಳಲ್ಲಿ ಚಾಲ್ತಿಯಲ್ಲಿರುವಂತಹ ಪ್ರಕರಣಗಳನ್ನು ಶೀಘ್ರವಾಗಿ ವಿಲೇವಾರಿ ಮಾಡಲು ಸಾಧ್ಯವಾಗುತ್ತದೆ ಎಂದರು.
ಈ ಪೂರ್ವಭಾವಿ ಸಭೆಯಲ್ಲಿ ವಕೀಲರ ಸಂಘದ ಅಧ್ಯಕ್ಷ ಟಿ.ಸಿ.ಅಶ್ವತ್ಥಪ್ಪ, ತಹಶೀಲ್ದಾರ್ ಸಿಗ್ಬತ್ ಉಲ್ಲಾ, ಗುಡಿಬಂಡೆ ಕ್ಷೇತ್ರ ಶಿಕ್ಷಣಾಧಿಕಾರಿ ಎಂ. ಎಸ್.ಕೃಷ್ಣಪ್ಪ, ಗೌರಿಬಿದನೂರು ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ವಿ.ಶ್ರೀನಿವಾಸಮೂರ್ತಿ, ಚಿಕ್ಕಬಳ್ಳಾಪುರ ಕ್ಷೇತ್ರ ಶಿಕ್ಷಣಾಧಿಕಾರಿ ಮುನಿವೆಂಕಟರಾಮಚಾರಿ, ನಗರಗೆರೆ ಆರ್ ಐ ಚೌಡಪ್ಪ, ಇಸಿಓ ನಂಜುಂಡಪ್ಪ ಹಾಗೂ ನ್ಯಾಯಾಲಯದ ಸಿಬ್ಬಂದಿ ಹಾಜರಿದ್ದರು.