ಕರ್ನಾಟಕದಲ್ಲಿ ಲೋಕಸಭಾ ಚುನಾವಣೆ ಮುಗಿದ ಬಳಿಕ ರಾಜ್ಯ ಕಾಂಗ್ರೇಸ್ ಸರ್ಕಾರ ಉರುಳಿ ಬೀಳಲಿದೆ ಎಂದು ಕೆಲವು ನಾಯಕರು ಹೇಳಿಕೆಗಳನ್ನು ನೀಡುತ್ತಿದ್ದಾರೆ. ಈ ಕುರಿತು ಹಲವು ಬಾರಿ ಮಾಜಿ ಸಿಎಂ ಕುಮಾರಸ್ವಾಮಿಯವರೂ ಸಹ ಸರ್ಕಾರ ಉರುಳಿ ಬೀಳುವ ಬಗ್ಗೆ ಹೇಳಿಕೆ ನೀಡಿದ್ದಾರೆ. ಇದೀಗ ಕುಮಾರಸ್ವಾಮಿಯವರ ಈ ಹೇಳಿಕೆಗೆ ಭಾರಿ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಲೇವಡಿ ಮಾಡಿದ್ದಾರೆ.
ಲೋಕಸಭಾ ಚುನಾವಣೆಯ ಬಳಿಕ ರಾಜ್ಯ ಸರ್ಕಾರ ಉರುಳಿ ಬೀಳಲಿದೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆ ನೀಡಿದ್ದು, ಈ ಹೇಳಿಕೆಗೆ ಸಚಿವ ಎಂ.ಬಿ.ಪಾಟಿಲ್ ಲೇವಡಿ ಮಾಡಿದ್ದಾರೆ. ರಾಜ್ಯ ಸರ್ಕಾರ ಉರುಳಿಸುವ ಹಗಲು ಕನಸ್ಸನ್ನು ಕುಮಾರಸ್ವಾಮಿ ಕಾಣುತ್ತಿದ್ದಾರೆ ಎಂದಿದ್ದಾರೆ. ಈ ಕುರಿತು ತಮ್ಮ ನಿವಾಸದಲ್ಲಿ ಮಾದ್ಯಮಗಳೊಂದಿಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೇಸ್ ಪಕ್ಷವು ರಾಜ್ಯದಲ್ಲಿ ಕನಿಷ್ಟ 20 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ. ವಿಜಯಪುರದಲ್ಲಿ ಕಾಂಗ್ರೇಸ್ ಅಭ್ಯರ್ಥಿ ಒಂದು ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂದು ಭವಿಷ್ಯ ನುಡಿದಿದ್ದಾರೆ.
ಇನ್ನೂ ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳು ಮತದಾರರ ಮನ ಗೆದ್ದಿವೆ. ರಾಜ್ಯ ಸರ್ಕಾರ ಜಾರಿ ಮಾಡಿದ ಗ್ಯಾರಂಟಿ ಯೋಜನೆಗಳು ಎಲ್ಲರಿಗೂ ತಲುಪಿದೆ. ನಮ್ಮ ಗ್ಯಾರಂಟಿ ಯೋಜನೆಗಳು ನಮಗೆ ಶ್ರೀರಕ್ಷೆಯಾಗಿದೆ. ಲೋಕಸಭಾ ಚುನಾವಣೆಯ ಫಲಿತಾಂಶದ ಬಳಿಕ ಜೆ.ಡಿ.ಎಸ್ ಗತಿ ಏನಾಗಲಿದೆ ಎಂಬುದನ್ನು ಕಾದು ನೋಡಬೇಕಿದೆ. ಇನ್ನೂ ಜೆಡಿಎಸ್ ಪಕ್ಷದ ಅನೇಕರು ಕಾಂಗ್ರೇಸ್ ಸಂಪರ್ಕದಲ್ಲಿದ್ದಾರೆ. ಅನೇಕ ಜೆಡಿಎಸ್ ನಾಯಕರಿಗೆ ಪೆನ್ ಡ್ರೈವ್ ಪ್ರಕರಣ ತಲೆನೋವಾಗಿ ಪರಿಣಮಿಸಿದೆ. ಇನ್ನೂ ಪ್ರಜ್ವಲ್ ರೇವಣ್ಣನವರ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕೆಂದು ಕುಮಾರಸ್ವಾಮಿ ರಾಜ್ಯಪಾಲರಿಗೆ ಮನವಿ ಮಾಡಿದ್ದಾರೆ. ಆ ಮೂಲಕ ಕ್ಲೀನ್ ಚೀಟ್ ತೆಗೆದುಕೊಳ್ಳಲು ಹಾಗೂ ಬಿಜೆಪಿಯಿಂದ ಪರಿಶುದ್ದತೆಯ ಸರ್ಟಿಫಿಕೇಟ್ ಪಡೆದುಕೊಳ್ಳುವ ಯೋಜನೆ ರೂಪಿಸಿದ್ದಾರೆ. ಸದ್ಯ ತನಿಖೆ ನಡೆಯುತ್ತಿರುವ ಪ್ರಕರಣದ ಬಗ್ಗೆ ನಾನು ಏನನ್ನೂ ಮಾತನಾಡೋಲ್ಲ ಎಂದು ಹೇಳಿದ್ದಾರೆ.