ಸಿಎಂ ಸಿದ್ದರಾಮಯ್ಯ ವಿರುದ್ದ ಕೇಳಿಬಂದ ಮುಡಾ ಹಗರಣ ಪ್ರಕರಣಕ್ಕೆ (MUDA Scam) ಸಂಬಂಧಿಸಿದಂತೆ ಮೊದಲ ಬಾರಿಗೆ ಸಿಎಂ ಪತ್ನಿ ಪಾರ್ವತಿ ರಿಯಾಕ್ಟ್ ಆಗಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಹಾಗೂ ಜಾರಿ ನಿರ್ದೇಶನಾಲಯ ಪ್ರಕರಣ ದಾಖಲಾಗುತ್ತಿದ್ದಂತೆ ಮತ್ತೊಂದು ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಸಿಎಂ ಪತ್ನಿ ಪಾರ್ವತಿ ರವರು 14 ನಿವೇಶನಗಳನ್ನು (MUDA Scam)ಹಿಂದಿರುಗಿಸಲು ಮುಡಾ ಆಯುಕ್ತರಿಗೆ ಪತ್ರ ಬರೆದಿದ್ದಾರೆ.
ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಮುಡಾ ಆಯುಕ್ತರಿಗೆ ಬರೆದ ಪತ್ರದಲ್ಲಿ ಏನಿದೆ ಎಂಬ ವಿಚಾರಕ್ಕೆ ಬಂದರೇ, ನನ್ನ ಪತಿಯಾಗಿರುವ ರಾಜ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರು (MUDA Scam)ತಮ್ಮ 40 ವರ್ಷದ ಸುದೀರ್ಘ ರಾಜಕಾರಣದಲ್ಲಿ ಯಾವುದೇ ಸಣ್ಣ ಕಳಂಕವೂ ಅವರ ಮೇಲೆ ಬರದೇ ನೈತಿಕತೆಯನ್ನು ವ್ರತದಂತೆ ಪಾಲಿಸಿಕೊಂಡು ಬಂದವರು. ರಾಜಕೀಯವೂ ಸೇರಿದಂತೆ ಸಾರ್ವಜನಿಕ ಜೀವನದಲ್ಲಿ ಕಾಣಿಸಿಕೊಂಡು ಅವರಿಗೆ ಮುಜುಗರ ಉಂಟು ಮಾಡಬಾರದೆಂಬ ನಿರ್ಧಾರಕ್ಕೆ ಬದ್ದಳಾಗಿ ಬದುಕಿದವಳು. ನಾನು ಎಂದೂ ಮನೆ, ಆಸ್ತಿ, ಚಿನ್ನ, ಸಂಪತ್ತನ್ನು ಬಯಸಿದವಳಲ್ಲ. ಯಾವುದೇ ಕಾರಣಕ್ಕೂ (MUDA Scam)ನನ್ನಿಂದ ಅವರ ರಾಜಕೀಯ ಜೀವನಕ್ಕೆ ಒಂದು ಸಣ್ಣ ಹನಿಯಷ್ಟೂ ಕಳಂಕ ತಟ್ಟಬಾರದೆಂಬ ಉದ್ದೇಶದಿಂದ ನಡೆದುಕೊಂಡವಳು. ರಾಜ್ಯದ ಜನತೆ ನನ್ನ ಪತಿಗೆ ನೀಡುತ್ತಿರುವ ಪ್ರೀತಿ ಅಭಿಮಾನಗಳನ್ನು ದೂರದಿಂದಲೇ ಕಂಡು ಸಂತೋಷ ಹಾಗೂ ಹೆಮ್ಮೆ ಪಟ್ಟವಳು. ಹೀಗಿದ್ದರೂ ಮೈಸೂರಿನ ಮುಡಾ ನಿವೇಶನಕ್ಕೆ ಸಂಬಂಧಿಸಿದಂತೆ ಕೇಳಿಬಂದ ಆರೋಪಗಳಿಂದ ನಾಣು ಘಾಸಿಗೊಂಡಿದ್ದೇನೆ.
ಇಲ್ಲಿದೆ ಸಿದ್ದರಾಮಯ್ಯ ಪತ್ನಿ ಬರೆದ ಪತ್ರ : https://x.com/siddaramaiah/status/1840813740998213810
ನನ್ನ ಸ್ವಂತ ಸಹೋದರ ಅರಿಶಿನ ಕುಂಕುಮ ಭಾಗವಾಗಿ ಜಮೀನಿನ ಬಾಬ್ತು ಪಡೆದ ನಿವೇಶನಗಳು (MUDA Scam) ಇಷ್ಟೊಂದು ರಾದ್ದಾಂತವಾಗುತ್ತದೆ, ಇದರಿಂದ ನನ್ನ ಪತಿಯವರು ಅನ್ಯಾಯವಾಗಿ ಆರೋಪಗಳನ್ನು ಎದುರಿಸುವಂತಾಗುತ್ತದೆ ಎಂಬುದನ್ನು ನಾನು ಊಹೆ ಮಾಡಿದವಳಲ್ಲ. ನನಗೆ ಈ ನಿವೇಶನ, ಮನೆ, ಆಸ್ತಿ, ಸಂಪತ್ತು ಯಾವುದೂ ಕೂಡ ನನ್ನ ಪತಿಯ ಗೌರವ, ಘನತೆ, ಮರ್ಯಾದೆ ಮತ್ತು ಅವರ ನೆಮ್ಮದಿಗಿಂತ ದೊಡ್ಡದಲ್ಲ. ಇಷ್ಟು ವರ್ಷಗಳ ಕಾಲ ಅಧಿಕಾರದಲ್ಲಿದ್ದ ಅವರಿಂದ ಏನನ್ನೂ ನನಗಾಗಲೀ, ನನ್ನ ಕುಟುಂಬಕ್ಕಾಗಲೀ ಬಯಸದೇ ಇದ್ದ ನನಗೆ ಈ ನಿವೇಶನಗಳು ತೃಣಕ್ಕೆ ಸಮ. ಈ ಹಿನ್ನೆಲೆಯಲ್ಲಿ ವಿವಾದಕ್ಕೆ ಕಾರಣವಾಗಿರುವ ಮುಡಾದ 14 ನಿವೇಶನಗಳನ್ನು ವಾಪಸ್ ಮಾಡಲು ನಿರ್ಧರಿಸಿದ್ದೇನೆ. ಈ ಬಗ್ಗೆ ನನ್ನ ಪತಿಯವರ ಅಭಿಪ್ರಾಯ ಏನಿದೆ ಎನ್ನುವುದು ನನಗೆ ತಿಳಿದಿಲ್ಲ. ನನ್ನ ಮಗನ ಬಳಿಯಾಗಲಿ, ನನ್ನ ಕುಟುಂಬದ ಇತರ ಸದಸ್ಯರ ಬಳಿಯಾಗಲಿ ಇದರ ಬಗ್ಗೆ ನಾನು ಚರ್ಚಿಸಿಲ್ಲ. ಇದು ನಾನು ನನ್ನ ಆತ್ಮಸಾಕ್ಷಿಯ ಕರೆಗೆ ಓಗೊಟ್ಟು ಪ್ರಜ್ಞಾಪೂರ್ವಕವಾಗಿ ಕೈಗೊಂಡಿರುವ ತೀರ್ಮಾನ ವಾಗಿದೆ.
ಈ ಹಂತದಲ್ಲಿ ಇಂತಹ ನಿರ್ಧಾರಕ್ಕೆ ಏಕೆ ಬಂದಿರಿ? ಎಂದು ಯಾರಾದರೂ ಕೇಳಬಹುದು. ಆರೋಪ ಕೇಳಿ ಬಂದ ದಿನವೇ ನಾನು ಈ ನಿರ್ಧಾರ ಮಾಡಿದ್ದೆ. ಆದರೆ, ಈ ಮುಡಾ ನಿವೇಶನ ಹಂಚಿಕೆಯ ಆರೋಪವನ್ನು ರಾಜಕೀಯ ದುರುದ್ದೇಶದಿಂದ ಮಾಡಲಾಗಿದ್ದು, ಈ ಅನ್ಯಾಯದ ವಿರುದ್ಧ ಹೋರಾಡಬೇಕು. ಅವರ ಸಂಚಿಗೆ ನಾವು ಬಲಿಯಾಗಬಾರದು ಎಂದು ಕೆಲವು ಹಿತೈಷಿಗಳು ಹೇಳಿದ ಕಾರಣಕ್ಕೆ ನಿವೇಶನ ವಾಪಸು ಮಾಡಬೇಕೆಂಬ ನಿರ್ಧಾರವನ್ನು ಕೈ ಬಿಟ್ಟಿದ್ದೆ. ನನ್ನ ಈ ನಿರ್ಧಾರ ಅಚಲವಾಗಿದ್ದು, ಈ ನಿವೇಶನಗಳನ್ನು ವಾಪಸು ನೀಡುವುದರ ಜೊತೆಗೆ ಮುಡಾಕ್ಕೆ ಸಂಬಂಧಿಸಿದ ಎಲ್ಲಾ ಆರೋಪಗಳ ಬಗ್ಗೆ ಸಮಗ್ರ ತನಿಖೆ ಮಾಡಬೇಕೆಂದು ಆಗ್ರಹಿಸುತ್ತೇನೆ.
ಕೊನೆಯದಾಗಿ, ಎಲ್ಲಾ ರಾಜಕೀಯ ಪಕ್ಷದ ನಾಯಕರು ಮತ್ತು ಮಾಧ್ಯಮ ಕ್ಷೇತ್ರದ ಬಂಧುಗಳಲ್ಲಿ ನನ್ನ ವಿನಮ್ರ ವಿನಂತಿ. ದಯವಿಟ್ಟು ರಾಜಕೀಯ ಕ್ಷೇತ್ರದಿಂದ ದೂರವಿದ್ದು, ತಮ್ಮ ಪಾಡಿಗೆ ತಾವಿರುವ ರಾಜಕೀಯ ಕುಟುಂಬದ ಹೆಣ್ಣು ಮಕ್ಕಳನ್ನು ರಾಜಕೀಯ ದ್ವೇಷ ಸಾಧನೆಗಾಗಿ ವಿವಾದದ ಕಣಕ್ಕೆ ಎಳೆದು ತಂದು ಅವರ ಘನತೆ, ಗೌರವಗಳಿಗೆ ಹಾನಿ ಮಾಡಬೇಡಿ. ಶ್ರೀಮತಿ ಪಾರ್ವತಿ, ಎಂದು ಮನವಿ ಮಾಡಿಕೊಂಡಿದ್ದಾರೆ.