ಪ್ರತಿಯೊಂದು ಮಗುವಿನಲ್ಲಿ ಒಂದಲ್ಲ ಒಂದು ರೀತಿಯ ಪ್ರತಿಭೆ ಅಡಗಿರುತ್ತದೆ ಅದನ್ನು ಹೊರತೆಗೆಯುವ ನಿಟ್ಟಿನಲ್ಲಿ ಪೋಷಕರು ಹಾಗೂ ಶಿಕ್ಷರಕು ಮಕ್ಕಳಿಗೆ ಪ್ರೋತ್ಸಾಹ ನೀಡಬೇಕು. (Pratibha Karanji) ಆಗ ಮಾತ್ರ ಮಗು ತನ್ನ ಪ್ರತಿಭೆಯನ್ನು ಪ್ರದರ್ಶಿಸಲು ಸಾಧ್ಯವಾಗುತ್ತದೆ ಎಂದು ಚಿಕ್ಕಬಳ್ಳಾಪುರ ಜಿಲ್ಲೆ ಗುಡಿಬಂಡೆ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಕೃಷ್ಣಪ್ಪ ತಿಳಿಸಿದರು.
ಚಿಕ್ಕಬಳ್ಳಾಪುರ ಜಿಲ್ಲೆ ಗುಡಿಬಂಡೆ ಪಟ್ಟಣದ ಸರ್ಕಾರಿ ಬಾಲಕರ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಕ್ಲಸ್ಟರ್ ಹಂತದ ಪ್ರತಿಭಾ ಕಾರಂಜಿ (Pratibha Karanji) ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಮಕ್ಕಳಲ್ಲಿ ಅಡಗಿರುವ ಸೂಪ್ತವಾದ ಕಲೆ ಹೊರಹಾಕಲು ಪ್ರತಿಭಾ ಕಾರಂಜಿ ಒಂದು ಅತ್ಯತ್ತಮ ವೇದಿಕೆಯಾಗಿದೆ. ಪ್ರತಿಯೊಂದು ಮಗುವಿನಲ್ಲೂ ಒಂದಲ್ಲ ಒಂದು ರೀತಿಯ ಕಲೆ ಇರುತ್ತದೆ. ಆ ಕಲೆಯನ್ನು ಪ್ರದರ್ಶನ ಮಾಡಲು ಒಂದು ವೇದಿಕೆ ಬೇಕಾಗುತ್ತದೆ, ಜೊತೆಗೆ ಮಕ್ಕಳಿಗೆ ಪ್ರೋತ್ಸಾಹ ಸಹ ನೀಡಬೇಕಾಗುತ್ತದೆ. ಆದ್ದರಿಂದ ಪೋಷಕರು ಹಾಗೂ ಶಿಕ್ಷಕರು ಮಕ್ಕಳಲ್ಲಿನ ಪ್ರತಿಭೆಯನ್ನು ಗುರ್ತಿಸಿ ಅವರಿಗೆ ಪ್ರೋತ್ಸಾಹ ನೀಡಬೇಕೆಂದು ಸಲಹೆ ನೀಡಿದರು.
ಬಳಿಕ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಕೆ.ವಿ.ನಾರಾಯಣಸ್ವಾಮಿ ಮಾತನಾಡಿ, ಸರ್ಕಾರ ಪ್ರತೀ ವರ್ಷ ಮಕ್ಕಳಿಗಾಗಿ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಆಯೋಜಿಸುತ್ತದೆ. ಈ ಕಾರ್ಯಕ್ರಮದ ಮೂಲಕ ಮಕ್ಕಳಲ್ಲಿನ ಪ್ರತಿಭೆಯನ್ನು ಹೊರತರುವ ಪ್ರಯತ್ನ ಮಾಡಲಾಗುತ್ತದೆ. ವಿದ್ಯಾರ್ಥಿಗಳು ಸಹ ಈ ರೀತಿಯ ಕಾರ್ಯಕ್ರಮಗಳಲ್ಲಿ ಹೆಚ್ಚು ಹೆಚ್ಚು ತೊಡಗಿಸಿಕೊಳ್ಳಬೇಕು. ವೇದಿಕೆ ಭಯ ಬಿಟ್ಟು ಇಂತಹ ಕಾರ್ಯಕ್ರಮಗಳಲ್ಲಿ ಭಾಗವಹಿಸಿದಾಗ ತಮ್ಮಲ್ಲಿನ ಪ್ರತಿಭೆ ಎಲ್ಲರಿಗೂ ತಿಳಿಯುತ್ತದೆ ಎಂದರು.
ಇದೇ ಸಮಯದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಬಾಲಾಜಿ, ಕಾರ್ಯದರ್ಶಿ ಶ್ರೀರಾಮಪ್ಪ, ಗೌರವಾಧ್ಯಕ್ಷ ಕೃಷ್ಣಪ್ಪ ಮಾತನಾಡಿದರು. ಈ ಸಮಯದಲ್ಲಿ ಕ್ಲಸ್ಟರ್ ಹಂತದ ವಿವಿಧ ಶಾಲೆಗಳ ಮಕ್ಕಳು ಕ್ಲೇ ಮಾಡಲಿಂಗ್, ಪ್ರಬಂಧ ಸ್ಪರ್ಧೆ, ಚಿತ್ರಕಲೆ ಸ್ಪರ್ಧೆ, ಆಶುಭಾಷಣ, ವಿವಿಧ ವೇಷ ಸ್ಪರ್ಧೆ, ಗೀತೆಗಳ ಗಾಯನ ಸೇರಿದಂತೆ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು. ಈ ಸ್ಪರ್ಧೆಗಳಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಣೆ ಮಾಡಲಾಯಿತು. ಈ ವೇಳೆ ಕ್ಲಸ್ಟರ್ ಹಂತದ ವಿವಿಧ ಶಾಲೆಗಳ ಶಿಕ್ಷಕರು, ಸಿಬ್ಬಂದಿ ವರ್ಗ, ಬಿ.ಆರ್.ಪಿ, ಸಿ.ಆರ್.ಪಿ, ಕೆಲ ಮುಖಂಡರು ಸೇರಿದಂತೆ ಹಲವರು ಹಾಜರಿದ್ದರು.