Summer – ಬೇಸಿಗೆ ಆರಂಭವಾಗಿರುವ ಹಿನ್ನೆಲೆಯಲ್ಲಿ ತಾಲೂಕಿನ ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಸೂಚಿಸಿದ್ದಾರೆ. ಬಾಗೇಪಲ್ಲಿ ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ನಡೆದ ಟಾಸ್ಕ್ ಫೋರ್ಸ್ ಸಭೆಯಲ್ಲಿ ಮಾತನಾಡಿದ ಅವರು, ನೀರಿನ ಸಮಸ್ಯೆ ಮತ್ತು ಕುಡಿಯುವ ನೀರು ಸಂಬಂಧಿಸಿದ ಸಮಸ್ಯೆಗಳನ್ನು ತಡೆಗಟ್ಟಲು ಪಿಡಿಓಗಳಿಗೆ ಸ್ಪಷ್ಟ ನಿರ್ದೇಶನ ನೀಡಿದರು.
Summer – ಸಮಸ್ಯೆ ಕಂಡುಬಂದರೇ ತಕ್ಷಣ ಕ್ರಮ ತೆಗೆದುಕೊಳ್ಳಿ
ಶಾಸಕರು ಮಾತನಾಡುತ್ತಾ, “ಹಿಂದಿನ ವರ್ಷಗಳಲ್ಲಿ ಮಳೆ ಕೊರತೆಯಿಂದ ತಾಲೂಕಿನ ಹಲವು ಗ್ರಾಮಗಳಲ್ಲಿ ಕುಡಿಯುವ ನೀರಿನ ಕೊರತೆ ಉಂಟಾಗಿತ್ತು. ಆದರೆ ಈಗ ಸದ್ಯಕ್ಕೆ ಅಂತಹ ಪರಿಸ್ಥಿತಿ ಇಲ್ಲ. ಆದಾಗ್ಯೂ, ಬೇಸಿಗೆಯ ತೀವ್ರತೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಎಲ್ಲೆಡೆ ನೀರಿನ ವ್ಯವಸ್ಥೆ ಸರಿಯಾಗಿ ನಿರ್ವಹಿಸಬೇಕು. ಒಂದು ವೇಳೆ ಯಾವುದೇ ಗ್ರಾಮದಲ್ಲಿ ಸಮಸ್ಯೆ ಕಂಡುಬಂದರೆ ತಕ್ಷಣ ಪರಿಹಾರ ಕಲ್ಪಿಸಿ” ಎಂದು ಅಧಿಕಾರಿಗಳಿಗೆ ತಿಳಿಸಿದರು.

ಸಭೆಯಲ್ಲಿ ತಾಲೂಕಿನ ನೀರಿನ ಪರಿಸ್ಥಿತಿ ಬಗ್ಗೆ ವಿವರ ಪಡೆದ ಶಾಸಕರು, ಲಘುಮದ್ದೇಪಲ್ಲಿ, ಮೂಗಚಿನ್ನೇಪಲ್ಲಿ ಮತ್ತು ಬೈರೇಪಲ್ಲಿ ಗ್ರಾಮಗಳಲ್ಲಿ ನೀರಿನ ಕೊರತೆ ಇರುವುದು ಗಮನಕ್ಕೆ ಬಂದಿದೆ ಎಂದು ಹೇಳಿದರು. “ಈ ಗ್ರಾಮಗಳಲ್ಲಿ ಸದ್ಯಕ್ಕೆ ಪರ್ಯಾಯ ವ್ಯವಸ್ಥೆ ಮಾಡಲಾಗಿದೆ. ಆದರೆ ಮುಂದೆ ಯಾವುದೇ ತೊಂದರೆ ಆಗದಂತೆ ನಿಗಾ ಇಡಿ” ಎಂದು ಅಧಿಕಾರಿಗಳಿಗೆ ಸಲಹೆ ನೀಡಿದರು.
Summer – ಬೆಳೆಹಾನಿಯಾಗಿದ್ದರೇ ಪರಿಹಾರ ಕ್ರಮ ತೆಗೆದುಕೊಳ್ಳಿ
ತಾಲೂಕಿನಲ್ಲಿ ಇತ್ತೀಚೆಗೆ ಬಿರುಗಾಳಿ ಸಹಿತ ಆಲಿಕಲ್ಲು ಮಳೆ ಸುರಿದಿದ್ದರೂ, ರೈತರು ಬೆಳೆದ ಬೆಳೆಗಳಿಗೆ ಯಾವುದೇ ಹಾನಿಯಾಗಿಲ್ಲ ಎಂಬ ಮಾಹಿತಿ ಸಭೆಯಲ್ಲಿ ತಿಳಿದುಬಂದಿದೆ. “ಒಂದು ವೇಳೆ ಬೆಳೆ ನಷ್ಟ ಉಂಟಾಗಿದ್ದರೆ, ಸೂಕ್ತ ಪರಿಹಾರ ನೀಡುವ ಕ್ರಮ ಕೈಗೊಳ್ಳಿ” ಎಂದು ಶಾಸಕರು ಅಧಿಕಾರಿಗಳಿಗೆ ಸೂಚಿಸಿದರು. ರೈತರ ಸಮಸ್ಯೆ ಮತ್ತು ಬೆಳೆ ರಕ್ಷಣೆಗೆ ಸರ್ಕಾರ ಆದ್ಯತೆ ನೀಡುತ್ತದೆ ಎಂದು ಭರವಸೆ ನೀಡಿದರು.
ಜನಸ್ಪಂದನಾ ಕಾರ್ಯಕ್ರಮ
ಏಪ್ರಿಲ್ 22 ರಂದು ತಾಲೂಕಿನ ದೇವರಗುಡಿಪಲ್ಲಿ ಗ್ರಾಮದಲ್ಲಿ ಜನಸ್ಪಂದನಾ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಸುಮಾರು 3,000 ಫಲಾನುಭವಿಗಳಿಗೆ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ವಿತರಿಸಲಾಗುವುದು. “ಎಲ್ಲಾ ಇಲಾಖೆಯ ಅಧಿಕಾರಿಗಳು ಕಡ್ಡಾಯವಾಗಿ ಹಾಜರಿರಬೇಕು. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು” ಎಂದು ಶಾಸಕರು ಮನವಿ ಮಾಡಿದರು.

ವಿದ್ಯಾರ್ಥಿಗಳಿಗೆ ಸನ್ಮಾನ
ಸಭೆಯ ಸಂದರ್ಭದಲ್ಲಿ, ಬಿಸಿಎಂ ಇಲಾಖೆಯ ವಿದ್ಯಾರ್ಥಿ ನಿಲಯದಲ್ಲಿ ವ್ಯಾಸಂಗ ಮಾಡುತ್ತಿರುವ 2024-25ನೇ ಸಾಲಿನ ದ್ವಿತೀಯ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಶಾಸಕರು ಆತ್ಮೀಯವಾಗಿ ಸನ್ಮಾನಿಸಿದರು. ವಿದ್ಯಾರ್ಥಿ ಸಾಧನೆ ಮತ್ತು ಶಿಕ್ಷಣದ ಪ್ರೋತ್ಸಾಹಕ್ಕೆ ಇದು ಉತ್ತಮ ಉದಾಹರಣೆ ಎಂದು ಅವರು ಹೇಳಿದರು.
Read this also : Local News – ಪಟ್ಟಣದಲ್ಲಿ ನೈರ್ಮಲ್ಯ ಕಾಪಾಡುವುದು ನನ್ನ ಜವಾಬ್ದಾರಿ: ಸುಬ್ಬಾರೆಡ್ಡಿ
ಸಭೆಯಲ್ಲಿ ಉಪಸ್ಥಿತರಿದ್ದ ಅಧಿಕಾರಿಗಳು
ಈ ಸಂದರ್ಭದಲ್ಲಿ ತಹಶೀಲ್ದಾರ್ ಮನೀಷಾ ಮಹೇಶ್ ಪತ್ರಿ, ಇಓ ರಮೇಶ್, ಟಿಹೆಚ್‌ಒ ಡಾ. ಸತ್ಯನಾರಾಯಣ ರೆಡ್ಡಿ, ಪುರಸಭೆ ಮುಖ್ಯಾಧಿಕಾರಿ ಶ್ರೀನಿವಾಸ್, ಬಿಸಿಎಂ ಅಧಿಕಾರಿ ಶಿವಪ್ಪ ಮತ್ತಿತರರು ಉಪಸ್ಥಿತರಿದ್ದರು.