ರಾಜ್ಯ ಕಾಂಗ್ರೇಸ್ ಸರ್ಕಾರ ಒಂದು ವರ್ಷ ಆಡಳಿತ ಪೂರೈಸಿದೆ. ಈ ನಡುವೆ ವಿರೋಧ ಪಕ್ಷಗಳ ನಾಯಕರುಗಳು ಕಾಂಗ್ರೇಸ್ ಸರ್ಕಾರದ ಆಡಳಿತದ ಬಗ್ಗೆ ಟೀಕಾ ಪ್ರಹಾರ ನಡೆಸುತ್ತಿದ್ದಾರೆ. ರಾಜ್ಯ ಕಾಂಗ್ರೇಸ್ ಸರ್ಕಾರದ ಅಧಿಕಾರದಲ್ಲಿ ಪರಿಶಿಷ್ಟ ಜಾತಿ ಹಾಗೂ ಪಂಗಡದ 11 ಸಾವಿರ ಕೋಟಿ ಎಸ್.ಸಿ.ಪಿ/ಟಿ.ಎಸ್.ಪಿ ಅನುದಾನವನ್ನು ಗ್ಯಾರಂಟಿ ಹೆಸರಿನಲ್ಲಿ ಲಪಟಾಯಿಸಿದೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಗಂಭೀರ ಆರೋಪ ಮಾಡಿದ್ದಾರೆ.
ಈ ಕುರಿತು ತಮ್ಮ ಸೋಷಿಯಲ್ ಮಿಡಿಯಾ ಖಾತೆಯಲ್ಲಿ ಖಾಸಗಿ ಸುದ್ದಿವಾಹಿನಿ ಪ್ರಕಟಿಸಿದ ಸುದ್ದಿಯೊಂದನ್ನು ಟ್ಯಾಗ್ ಮಾಡಿ ಕಾಂಗ್ರೇಸ್ ಸರ್ಕಾರದ ವಿರುದ್ದ ಆಕ್ರೋಷ ಹೊರಹಾಕಿದ್ದಾರೆ. ಏಷ್ಯಾನೆಟ್ ಸುವರ್ಣ ನ್ಯೂಸ್ ಡಿಜಿಟಲ್ ತಂಡದಿಂದ ಪ್ರಕಟಿತಗೊಂಡ ವಾಲ್ಮೀಕಿ ಅಭಿವೃದ್ದಿ ನಿಗಮನದಲ್ಲಿ 85 ಕೋಟಿ ಅವ್ಯವಹಾರ, ಸಚಿವರ ಹೆಸರು ಬರೆದಿಟ್ಟು ಅಧಿಕಾರಿ ಆತ್ಮಹತ್ಯೆ ಎಂಬ ಟೈಟಲ್ ನಡಿ ವರದಿಯನ್ನು ಪ್ರಕಟಿಸಲಾಗಿತ್ತು. ಈ ವರದಿಯನ್ನು ಟ್ಯಾಗ್ ಮಾಡಿ ಆರ್.ಅಶೋಕ್ ರಾಜ್ಯ ಕಾಂಗ್ರೇಸ್ ಸರ್ಕಾರದ ವಿರುದ್ದ ಆಕ್ರೋಷ ಹೊರಹಾಕಿದ್ದಾರೆ. ತಮ್ಮ ಎಕ್ಸ್ (ಟ್ವಿಟರ್) ಖಾತೆಯಲ್ಲಿ ಪೋಸ್ಟ್ ಮಾಡಿದ್ದು, ಅದರಲ್ಲಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ 187 ಕೋಟಿ ರೂಪಾಯಿ ಮೌಲ್ಯದ ಬೃಹತ್ ಭ್ರಷ್ಟಾಚಾರವನ್ನ ಅಧಿಕಾರಿಯ ತಲೆಗೆ ಕಟ್ಟಲು ಹೋಗಿ ಕಿರುಕುಳ ನೀಡಿ ಆತ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗುವಂತೆ ಮಾಡಿದೆ ಈ ಕೊಲೆಗಡುಕ @INCKarnataka ಸರ್ಕಾರ ಎಂದು ಪೋಸ್ಟ್ ಮಾಡಿದ್ದಾರೆ.
ಸಿಎಂ ಸಿದ್ದರಾಮಯ್ಯನವರೇ ಇದು ಆತ್ಮಹತ್ಯೆ ಅಲ್ಲ. ಇದು ಕೊಲೆ. ಈ ಕೊಲೆಗೆ ಹೊಣೆ ಯಾರು? ನಿಮ್ಮ ಸರ್ಕಾರದ ಕಮಿಷನ್ ದಾಹಕ್ಕೆ ಇನ್ನೆಷ್ಟು ಜೀವಗಳು ಬಲಿಯಾಗಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಕ್ಕೆ ಸೇರಬೇಕಾದ 11,000 ಕೋಟಿ ರೂಪಾಯಿ ಎಸ್ ಸಿಎಸ್ ಪಿ/ಟಿಎಸ್ ಪಿ ಹಣವನ್ನ ಗ್ಯಾರೆಂಟಿ ಹೆಸರಿನಲ್ಲಿ ಲಪಟಾಯಿಸಿ ಈಗಾಗಲೇ ದಲಿತರ ಹೊಟ್ಟೆಗೆ ಹೊಡೆಯುವ ಪಾಪದ ಕೆಲಸ ಮಾಡಿದ್ದೀರಿ. ಈಗ ಅಭಿವೃದ್ಧಿ ನಿಗಮದಲ್ಲಿ 85 ಕೋಟಿ ರೂಪಾಯಿ ಭ್ರಷ್ಟಾಚಾರ ನಡೆಸಿ ಒಬ್ಬ ಅಧಿಕಾರಿಯ ಸಾವಿಗೆ ಕಾರಣರಾಗಿದ್ದೀರಿ. ಸಿಎಂ ನವರೇ, ಈ ಕೂಡಲೇ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಸಚಿವ ಬಿ.ನಾಗೇಂದ್ರ ರವರನ್ನು ಸಂಪುಟದಿಂದ ವಜಾ ಮಾಡಿ ಈ ಪ್ರಕರಣದ ತನಿಖೆಗೆ ಆದೇಶ ಮಾಡಿ. ತಪ್ಪಿತಸ್ಥರಿಗೆ ಶಿಕ್ಷೆ ನೀಡಿ ಆತ್ಮಹತ್ಯೆಗೆ ಶರಣಾದ ಅಧಿಕಾರಿಯ ಕುಟುಂಬಕ್ಕೆ ನ್ಯಾಯ ಒದಗಿಸುವ ಕೆಲಸ ಮಾಡಿ ಎಂದು ಪೋಸ್ಟ್ ಮಾಡುವ ಮೂಲಕ ಆಕ್ರೋಷ ಹೊರಹಾಕಿದ್ದಾರೆ.
ಇನ್ನೂ ವಾಲ್ಮೀಕಿ ಅಭಿವೃದ್ದಿ ನಿಗಮದ ಅಧಿಕಾರಿ (ಸೂಪರಿಡೆಂಟ್ ಅಕೌಂಟೆಂಟ್) ಚಂದ್ರಶೇಖರ್ ಎಂಬವವರು ನೇಣಿಗೆ ಶರಣಾಗಿದ್ದರು. ನನ್ನ ಸಾವಿಗೆ ಕಾರಣ ನಿಗಮದ ಅಧಿಕಾರಿಗಳು ಹಾಗೂ ಇಲಾಖೆಯ ಸಚಿವರೇ ಕಾರಣವೆಂದು ಡೆತ್ ನೋಟ್ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಿಗಮದ ವ್ಯವಸ್ಥಾಪಕ ನಿದೇರ್ಶಕರಾದ ಜೆ.ಪದ್ಮನಾಭ, ಅಕೌಂಟ್ ವ್ಯವಸ್ಥಾಪಕ ಪರಶುರಾಮ್ ದುರ್ಗಣ್ಣನವರ್, ಯೂನಿಯನ್ ಬ್ಯಾಂಕ್‌ನ ಮುಖ್ಯ ವ್ಯವಸ್ಥಾಪಕರಾದ ಶುಚಿಸ್ಮಿತ ಕಾರಣ. ವಾಲ್ಮೀಕಿ ನಿಗಮದ ಅನುದಾನದಲ್ಲಿ 80 ರಿಂದ 85 ಕೋಟಿ ರೂ.ಗಳನ್ನು ನಿಯಮ ಬಾಹಿರವಾಗಿ ಲೂಟಿ ಮಾಡಿದ್ದಾರೆ. ಈ ಅವ್ಯವಹಾರದಲ್ಲಿ ನನ್ನ ಪಾತ್ರವಿಲ್ಲ. ಆದರೆ ಕೆಲಸದ ಒತ್ತಡದಲ್ಲಿ ಸದರಿ ಖಾತೆಯ ಚೆಕ್ ಪುಸ್ತಕ ಪಡೆಯದಿರುವುದು ಮತ್ತು ಕ್ಯಾಶ್ ಪುಸ್ತಕ ಮುಕ್ತಾಯಗೊಳಿಸದಿರುವುದು ನನ್ನ ತಪ್ಪಾಗಿದೆ. ಈ ಹಗರಣದಲ್ಲಿ ನಾನು ಕಾರಣ ನಲ್ಲ. ಆದ್ದರಿಂದ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಡೆತ್‌ನೋಟ್‌ನಲ್ಲಿ ಬರೆದಿದ್ದಾರೆ.