ರಾಜ್ಯದಲ್ಲಿ ಕಳೆದೆರಡು ದಿನಗಳಿಂದ ಮುಂಗಾರು ಮಳೆ ಚುರುಕಾಗಿದ್ದು, ಅಲ್ಲಲ್ಲಿ ಉತ್ತಮ ಮಳೆಯಾಗುತ್ತಿದೆ. ಕಳೆದ ಒಂದು ವಾರದಿಂದ ಕೊಂಚ ಮಳೆ ಬಿಡುವು ಕೊಟ್ಟಿತ್ತು. ಇದೀಗ ವರುಣ ಮತ್ತೆ ಅಬ್ಬರಿಸುವ ಮುನ್ಸೂಚನೆ ನೀಡಿದ್ದಾಣೆ. ಮುಂದಿನ ಒಂದು ವಾರದ ಕಾಲ ಕರ್ನಾಟಕದಲ್ಲಿ ಭಾರಿ ಮಳೆಯಾಗುವ ಸಾಧ್ಯೆತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ಕರಾವಳಿ ಭಾಗದಲ್ಲಿ ರೆಡ್ ಅಲರ್ಟ್ ಘೋಷಣೆಯಾಗಿದ್ದು, ಅದು ಮುಂದುವರೆದಿದೆ. ಒಂದು ವಾರದ ಕಾಲ ಮಳೆಯಾಗುವ ಮುನ್ಸೂಚನೆ ಇದೆ. ಇಂದಿನಿಂದ ರಾಜ್ಯದ ಹಲವು ಕಡೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಉತ್ತರ ಒಳನಾಡು ಪ್ರದೇಶ ಹಾಗೂ ದಕ್ಷಿಣ ಒಳನಾಡಿನಲ್ಲೂ ಸಹ ಭಾರಿ ಮಳೆಯಾಗುವ ಮುನ್ಸೂಚನೆಯಿದೆ. ಉತ್ತರ ಒಳನಾಡಿನ ಜಿಲ್ಲೆಗಳಾದ ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ಬೆಳಗಾವಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಿದ್ದು, ಮೂರನೇ ದಿನದಿಂದ ಮೂರು ದಿನ ಯಲ್ಲೋ ಅಲರ್ಟ್ ನೀಡಲಾಗಿದೆ. ಉಳಿದಂತೆ ಉತ್ತರ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಬಹುದು ಎನ್ನಲಾಗಿದ್ದು, ದಕ್ಷಿಣ ಒಳನಾಡಿ ಭಾಗದಲ್ಲೂ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಮಲೆನಾಡು ಭಾಗಗಳಾದ ಶಿವಮೊಗ್ಗ, ಹಾಸನ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಿಗೂ ಸಹ ರೆಡ್ ಅಲರ್ಟ್ ನೀಡಲಾಗಿದೆ. ಚಾಮರಾಜನಗರ, ಮೈಸೂರು, ಮಂಡ್ಯ, ದಾವಣಗೆರೆ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಉಳಿದ ಜಿಲ್ಲೆಗಳಲ್ಲೂ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ. ಇನ್ನೂ ಬೆಂಗಳೂರಿನಲ್ಲೂ ಸಹ ಒಂದು ವಾರ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಒಟ್ಟಾರೆಯಾಗಿ ರಾಜ್ಯದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದ್ದು, ಜೂನ್ ಕೊನೆಯ ವಾರ ಹಾಗೂ ಜುಲೈ ಮೊದಲ ವಾರ ರಾಜ್ಯದಲ್ಲಿ ಉತ್ತಮ ಮುಂಗಾರು ಮಳೆಯಾಗುವ ನಿರೀಕ್ಷೆ ಇದೆ ಎಂದು ಹೇಳಲಾಗಿದೆ.